ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ನಡೆದಿದೆ.
ಮಳವಳ್ಳಿ ತಾಲೂಕಿನ ಮಾರ್ಕಾಲು ಗ್ರಾಮದ ಶಿವಕುಮಾರ್(26) ಮೃತಪಟ್ಟ ಬೈಕ್ ಸವಾರ. ಖಾಸಗಿ ಕಂಪನಿಯಲ್ಲಿ ಡೆಲಿವರಿ ಬಾಯ್ ಯಾಗಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಕೆಲಸ ಮುಗಿಸಿಕೊಂಡು ಕೆ.ಎಂ.ದೊಡ್ಡಿ ಕಡೆಯಿಂದ ಮಾರ್ಕಾಲು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮದ್ದೂರು-ಮಳವಳ್ಳಿ ಹೆದ್ದಾರಿ ಬದಿಯಲ್ಲಿ ಮರಗಳನ್ನು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶಿವಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಡಿವೈಎಸ್ ಪಿ ಕೃಷ್ಣಪ್ಪ, ಸಿಪಿಐ ಬಿ.ಜಿ.ಮಹೇಶ್, ಪಿಎಸ್ ಐ ಶ್ರವಣ ದಾಸರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶವವನ್ನು ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




