ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದಲ್ಲಿ ಹತ್ತಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಆಗಲೇ ಗಾಂಧಿ ಪರಿಕಲ್ಪನೆಯ ರಾಮರಾಜ್ಯ ಸೃಷ್ಟಿ ಮಾಡಿದ್ದರು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ತಿಳಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮಂಡ್ಯ ಜಿಲ್ಲಾ ಶಾಖೆ, ಕೃಷಿಕ ಲಯನ್ಸ್ ಸಂಸ್ಥೆ, ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್ ಕೊಪ್ಪ ಇವರ ಆಶ್ರಯದಲ್ಲಿ ರೆಡ್ ಕ್ರಾಸ್ ಭವನದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮೈಸೂರು ಸಂಸ್ಥಾನದ ಸರ್ವತೋಮುಖ ಬೆಳವಣಿಗೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ. ದಕ್ಷ ದಿವಾನರುಗಳನ್ನು ನೇಮಿಸಿ ಇಡೀ ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ಮಾಡಿದರು.
ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಒಮ್ಮೆ ಮೈಸೂರು ಸಂಸ್ಥಾನಕ್ಕೆ ಆಗಮಿಸಿದ್ದರು. ಅವರು ನಾಲ್ವಡಿಯವರ ಅಭಿವೃದ್ಧಿಯ ಜನಪರ ಆಡಳಿತವನ್ನು ನೋಡಿ ರಾಜರ್ಷಿ ಎಂದು ಕರೆದರು.
1911ರಲ್ಲಿ ಕೃಷ್ಣರಾಜ ಸಾಗರ ಜಲಾಶಯವನ್ನು ಅರಮನೆಯ ಆಭರಣಗಳನ್ನು ಮಾರಿ ಕಟ್ಟಿಸಿದರು.ಇದರಿಂದ ಮಂಡ್ಯ, ಮೈಸೂರಿನ ಜಿಲ್ಲೆಯ ಲಕ್ಷಾಂತರ ಮಂದಿ ರೈತರಿಗೆ ಕೃಷಿ ಹಾಗೂ ಕುಡಿಯುವ ನೀರಿನ ಬಳಕೆಗೆ ಅನುಕೂಲವಾಗುತ್ತಿದೆ.ಬೆಂಗಳೂರಿಗೂ ಕುಡಿಯುವ ನೀರು ಸಿಕ್ಕಿದೆ.
ಶಿವನ ಸಮುದ್ರದ ಬಳಿ ಕಾವೇರಿ ನದಿಯಿಂದ ಜಲ ವಿದ್ಯುತ್ ಕೇಂದ್ರ ಆರಂಭಿಸಿ ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ 1905 ಆಗಸ್ಟ್ 3 ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು. ಶಿಕ್ಷಣ ಕ್ಷೇತ್ರದಲ್ಲಿ ನಾಲ್ವಡಿಯವರ ಕೊಡುಗೆ ಅಪಾರವಾಗಿದ್ದು, ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂಬ ಕಲ್ಪನೆಯನ್ನು ಆಗಲೇ ಅವರು ಹೊಂದಿದ್ದರಿಂದ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು ಉಚಿತ ಹಾಗೂ ಕಡ್ಡಾಯವಾಗಿ ಆರಂಭಿಸಿದ್ದರು.
ಮೈಸೂರು ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಮೂಲಕ ಉತ್ತಮ ವಿಶ್ವವಿದ್ಯಾಲಯವನ್ನು ಕಟ್ಟಿದ ಕೀರ್ತಿ ಅವರದ್ದಾಗಿದೆ. ಮೈಸೂರು ಸಂಸ್ಥಾನದಲ್ಲಿದ್ದ ಮಂಡ್ಯ ಜಿಲ್ಲೆಯನ್ನು ಬೇರ್ಪಡಿಸಿ ಪ್ರತ್ಯೇಕವಾಗಿ ಮಂಡ್ಯ ಜಿಲ್ಲೆಯಾಗಿ ಸ್ಥಾಪಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಕುಂಇ ಅಹಮ್ಮದ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕುಂಇ ಅಹಮದ್ ಮಾತನಾಡಿ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲ ಸಮುದಾಯಕ್ಕೂ ಸಾಮಾಜಿಕ ನ್ಯಾಯದಂತೆ ಸಮಾನತೆ ನೀಡಿದ ಮಹಾಪುರುಷ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಹೇಳಿದರು.
ನಾನು ತಹಶೀಲ್ದಾರ್ ಹುದ್ದೆಯಲ್ಲಿ ಕೆಲಸ ನಿರ್ವಹಿಸಿದ ಕಡೆ ಯಾವುದೇ ಸಾಮಾಜಿಕ ನ್ಯಾಯಕ್ಕೆ ಕೊರತೆ ಇಲ್ಲದಂತೆ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಮಂಡ್ಯ ಜಿಲ್ಲೆಯ ಜನರು ಹೃದಯವಂತರು, ಇಲ್ಲಿನ ಭಾಷೆ ಮತ್ತು ಮಂಡ್ಯ ಜಿಲ್ಲೆಯನ್ನು ನಾನು ಇಷ್ಟಪಡುತ್ತೇನೆ ಎಂದರು.
ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಹನುಮಂತು ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ವ್ಯಕ್ತಿಯಲ್ಲ ಅವರೊಬ್ಬ ಶಕ್ತಿ, ಬರಡಾಗಿದ್ದ ಮಂಡ್ಯ ಜಿಲ್ಲೆಯನ್ನು ಹಸಿರು ಗೊಳಿಸಿದ ಕೀರ್ತಿ ನಾಲ್ವಡಿ ಅವರಿಗೆ ಸಲ್ಲುತ್ತದೆ. ಮಂಡ್ಯ ಜಿಲ್ಲೆಯ ಪ್ರತಿಯೊಬ್ಬ ನಾಗರೀಕನೂ ತಮ್ಮ ಮನೆಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮಂಡ್ಯ ಜಿಲ್ಲಾ ಜಂಟಿ ಕಾರ್ಯದರ್ಶಿ ರಂಗಸ್ವಾಮಿ, ನಿರ್ದೇಶಕ ಎಂ.ಬಿ.ರಮೇಶ,ಕೃಷಿಕ ಲಯನ್ಸ್ ಸಂಸ್ಥೆಯ ಉಪಾಧ್ಯಕ್ಷ ಮೋಹನ್ ಕುಮಾರ್ ಹಾಜರಿದ್ದರು.