ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ತ್ಯಾಗ ಬಲಿದಾನ ಮಾಡಿ ದೇಶದ ನೆಮ್ಮದಿಗೆ ಕಾರಣರಾದ ಮಹಾತ್ಮಗಾಂಧಿ ಸೇರಿದಂತೆ ಹಲವು ಹೋರಾಟಗಾರರನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕಿದೆ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.
ಮಳವಳ್ಳಿ ಪಟ್ಟಣದ ಶ್ರೀಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಪ್ಪು ಹೆಜ್ಜೆಗಳನ್ನು ಇಡಲು ಸ್ವಾರ್ಥ ಮನೋಭಾವ ಕಾರಣವಾಗಿದೆ, ಭಾರತೀಯ ಮಕ್ಕಳಾಗಿ ಜೀವಿತ ಆವಧಿಯಲ್ಲಿ ದೇಶಕ್ಕೆ ಏನಾದರೂ ಒಂದು ಕೊಡುಗೆಯನ್ನು ಕೊಟ್ಟು ದೇಶದ ಋಣ ತೀರಿಸಬೇಕೆಂದು ಸಲಹೆ ನೀಡಿದರು.
ನಿರುದ್ಯೋಗವನ್ನು ತೊಡೆದು ಹಾಕುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ, ಹಸಿವಿನಿಂದ ಯಾವುದೇ ಒಬ್ಬ ವ್ಯಕ್ತಿ ಬಳಲಬಾರದೆಂಬ ಎಂಬ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿತು. ಗ್ಯಾರಂಟಿ ಯೋಜನೆ ಮೂಲಕ ಮನೆ ಮನೆತನ ಬದುಕನ್ನು ಕಟ್ಟಿಕೊಡುವಲ್ಲಿ ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ ಎಂದರು.
ತಹಶೀಲ್ದಾರ್ ಕೆ.ಎನ್.ಲೋಕೇಶ್ ಧ್ವಜಾರೋಹಣ ನೆರೆವೇರಿಸಿ ಮಾತನಾಡಿ, ಬ್ರೀಟಿಷರ ವಿರುದ್ದ ಹೋರಾಟ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವುದರ ಜೊತೆಗೆ ಅವರ ಅದರ್ಶಗುಣಗಳನ್ನು ಅಳವಡಿಸಿಕೊಂಡು ದೇಶಪ್ರೇಮ ಮೆರೆಯಬೇಕು ಎಂದರು.

ಸಬ್ ಇನ್ಸ್ಪೆಕ್ಟರ್ ರವಿಕುಮಾರ್ ಗೆ ಸನ್ಮಾನ
ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಿ. ರವಿಕುಮಾರ್ ಸೇವೆಯನ್ನು ಪರಿಗಣಿಸಿ ಮಂಡ್ಯ ತಾಲ್ಲೂಕು ಆಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕಳೆದ ಫೆಬ್ರವರಿಯಿಂದ ಆಗಸ್ಟ್ ತಿಂಗಳವರೆಗೆ ಹಿಂದೆ ಮಳವಳ್ಳಿ ಉಪವಿಭಾಗದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಟ್ಟು 14 ಕಳವು ಪ್ರಕರಣಗಳಲ್ಲಿ ಆರೋಪಿಗಳನ್ನು ದಸ್ತಗಿ ಅವರಿಂದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲು ಯಶಸ್ವಿಯಾಗಿದ್ದರು.
ಇದೇ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂರು ವಿದ್ಯಾರ್ಥಿಗಳಿಗೆ ಶಾಸಕ ಪಿ.ಎಂ ನರೇಂದ್ರಸ್ವಾಮಿ ಬಹುಮಾನ ವಿತರಿಸಿದರು. ಪೊಲೀಸ್ ಹಾಗೂ ವಿದ್ಯಾರ್ಥಿಗಳು ಪಥ ಸಂಚಾಲನ ನಡೆಸಿ ಧ್ವಜ ವಂದನೆ ಸಲ್ಲಿಸಿದರು. ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಕಾರ್ಯಕ್ರಮಕ್ಕೂ ಮುನ್ನಾ ಶಾಸಕ ಪಿ.ಎಂ ನರೇಂದ್ರಸ್ವಾಮಿ, ತಹಶೀಲ್ದಾರ್ ಲೋಕೇಶ್ ಸೇರಿದಂತೆ ಅನೇಕ ಗಣ್ಯರು ಪಟ್ಟಣದ ಪ್ರವಾಸಿ ಮಂದಿರ ಮುಂಭಾಗ ಇರುವ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಇ.ಓ ಶ್ರೀನಿವಾಸ್, ಡಿವೈಎಸ್‌ಪಿ ಕೃಷ್ಣಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಚಂಧ್ರಪಾಟೀಲ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಪುರಸಭೆ ಸದಸ್ಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು




