ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿ ಚಿತ್ರದುರ್ಗ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಂದು ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅಂತ್ಯವಾಗಿದ್ದರಿಂದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಇದೀಗ ಮತ್ತೆ ಸೆಪ್ಟಂಬರ್ 14 ದಿನಗಳ ಕಾಲ ಅಂದರೆ ಸೆಪ್ಟೆಂಬರ್ 27 ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಇನ್ನು ಪ್ರಕರಣದ ಎ 2 ಆರೋಪಿ ಹಾಸ್ಟೆಲ್ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಸೆಪ್ಟೆಂಬರ್ 27ರವರೆಗೆ ವಿಸ್ತರಣೆ ಮಾಡಿದೆ. ಈ ಪ್ರಕರಣದ 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.




