ಬೆಳೆಗಳು ಒಣಗುತ್ತಿದ್ದು ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ನೂರಾರು ಕಾರ್ಯಕರ್ತರು ಮಂಡ್ಯ ನಗರದ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಜಿಲ್ಲಾಧ್ಯಕ್ಷ ಕೆಂಪೂಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೂಡಲೇ ವಿ.ಸಿ ನಾಲೆಗಳಿಗೆ ನೀರು ಹರಿಸುವಂತೆ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಆನಂದ್ ಅವರನ್ನು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಕೆಂಪೂಗೌಡ ಮಾತನಾಡಿ, ನಮಗೆ ಮಳೆ ಬಂದಿದ್ದರೆ ನೀರು ಬಿಡುವ ಅವಶ್ಯಕತೆ ಇರಲಿಲ್ಲ. ಆದರೆ ಮಳೆ ಬರದಿದ್ದರಿಂದ ಬೆಳೆಗಳಿಗೆ ತೊಂದರೆಯಾಗಿದ್ದು ಒಣಗುತ್ತಿವೆ. ಈ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ನಾಲೆಯ ಎಲ್ಲಾ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸಿ ಬೆಳೆಯನ್ನು ರಕ್ಷಿಸಬೇಕೆಂದು ಕೋರಿದರು.
ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಆನಂದ್ ಮಾತನಾಡಿ, ನಾಲೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದು, ಶೀಘ್ರ ನೀರು ಹರಿಸುವುದಾಗಿ ಭರವಸೆ ನೀಡಿದರು.ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಕ್ತಾಯಗೊಳಿಸಲಾಯಿತು.
ರೈತ ಮುಖಂಡರಾದ ಪ್ರಸನ್ನ ಎನ್. ಗೌಡ, ರವಿಕುಮಾರ್, ವಿಜಯಕುಮಾರ್ ಬೋರಯ್ಯ,ಲಿಂಗೇಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.