Friday, November 20, 2026

ಪ್ರಾಯೋಗಿಕ ಆವೃತ್ತಿ

48ನೇ ದಿನಕ್ಕೆ ದಲ್ಲೆವಾಲ್ ಉಪವಾಸ ಸತ್ಯಾಗ್ರಹ | ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

ಐತಿಹಾಸಿಕ ದೆಹಲಿ ರೈತ ಹೋರಾಟದ ವಾಪಸ್ಸಾತಿ ಸಂದಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಮರಣಾಂತ ಉಪವಾಸ ಕುಳಿತಿರುವ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲರವರ ಪ್ರಾಣ ಉಳಿಸಲು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸುವಂತೆ ಆಗ್ರಹಿಸಿ ಮಂಡ್ಯದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ರೈತಪರ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿ, ಸಾಲ ಮನ್ನಾ ಮುಂತಾದ ಆಗ್ರಹಗಳನ್ನು ಈಡೇರಿಸುವಂತೆ ಒತ್ತಾಯಿಸಿ ನವೆಂಬರ್ 26 ರಿಂದ ಪಂಜಾಬ್-ಹರ್ಯಾಣ ಗಡಿಯಲ್ಲಿ ಹಿರಿಯ ರೈತ ನಾಯಕ 70 ವರ್ಷ ವಯಸ್ಸಿನ ಶ್ರೀ ಜಗಜಿತ್ ಸಿಂಗ್ ದಲ್ಲೇವಲ ರವರು ಅಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಈ ಉಪವಾಸ ಸತ್ಯಾಗ್ರಹ 48 ನೇ ದಿನಕ್ಕೆ ಕಾಲಿಟ್ಟಿತ್ತು. ದೇಹ ನಿತ್ರಾಣಗೊಂಡು, ಮಾಂಸಖಂಡಗಳು ತಮ್ಮ ತೂಕವನ್ನು ಕಳೆದುಕೊಂಡಿದ್ದು ರಕ್ತದೊತ್ತಡ ಕೂಡ ಅಪಾಯಕಾರಿ ಮಟ್ಟಕ್ಕೆ ಕುಸಿದಿದ್ದು ಯಾವಾಗ ಬೇಕಾದರೂ ಪ್ರಾಣ ಹೋಗುವಂತಹ ಸನ್ನಿವೇಶ ಉಂಟಾಗಿದೆ. ರೈತ ನಾಯಕರ ಈ ಪರಿಸ್ಥಿತಿಗೆ ಕೇಂದ್ರ ಸರ್ಕಾರವೇ ನೇರ ಕಾರಣವಾಗಿದೆ ಎಂದು ಕಿಡಿಕಾರಿದರು.

  • ಹಕ್ಕೋತ್ತಾಯಗಳೇನು ? 
  • 1. ಹಿರಿಯ ರೈತ ನಾಯಕ ಶ್ರೀ ಜಗಜಿತ್ ಸಿಂಗ್ ದಲ್ಲೇಾಲರವರ ಪ್ರಾಣ ಉಳಿಸಲು ಕ್ರಮ ವಹಿಸಬೇಕು ಕೂಡಲೇ ಸಂಯುಕ್ತ ಕಿಸಾನ್ ಮೋರ್ಚಾ(ಎಸ್.ಕೆ.ಎಂ.) ನಾಯದ ಜೊತೆ ಹಾಗೂ ದೆಹಲಿ ಗಡಿಗಳಲ್ಲಿ ಹೋರಾಟ ನಿರತರ ಜೊತೆ ಮಾತುಕತೆ ಆರಂಭಿಸಬೇಕು.
  • 2. ಎಲ್ಲಾ ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿ ಮಾಡಬೇಕು.
  • 3. ಎಲ್ಲಾ ರೈತರ ಎಲ್ಲಾ ರೀತಿಯ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು.
  • 4. ವಿದ್ಯುತ್ ಖಾಸಗೀಕರಣ ಮಾಡಬಾರದು. ವಿವಿಧೆಡೆ ನಡೆಯುತ್ತಿರುವ ಖಾಸಗೀಕರಣ ಹಾಗೂ ಪಂಪ್ ಸೆಟ್ ಮೀಟರೀಕರಣದ ಪ್ರಯತ್ನವನ್ನು ಕೂಡಲೇ ನಿಲ್ಲಿಸಬೇಕು.
  • 5. 60 ವರ್ಷ ದಾಟಿರುವ ಎಲ್ಲಾ ಕೃಷಿಕರಿಗೆ 5000 ರೂ. ಮಾಸಿಕ ಪಿಂಚಣಿ ನೀಡಬೇಕು.
  • 6. ಐತಿಹಾಸಿಕ ದೆಹಲಿ ರೈತ ಹೋರಾಟ ಮುಂದಿಟ್ಟಿದ್ದ ಎಲ್ಲಾ ಹಕ್ಕೊತ್ತಾಯಗಳನ್ನು ಈಡೇರಿಸಬೇಕು.
  • 7. ರೈತ ವಿರೋಧಿ, ಕರಾಳ ಕೃಷಿ ಕಾಯ್ದೆಯ ತದ್ರೂಪಾಗಿರುವ ಕೃಷಿ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ಧೋರಣೆಯನ್ನು ವಾಪಸ್ಸು ಪಡೆಯಬೇಕು.

ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ರೈತರ ಜೀವನ ಹಾಗೂ ಕೃಷಿ ರಕ್ಷಣೆಗೆ ಬಹಳ ಅಗತ್ಯವಿದ್ದ ಕರಾಳ ಕೃಷಿ ಕಾಯ್ದೆಗಳ ರದ್ದತಿ, ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಮುಂದಿಟ್ಟಿತ್ತು. 385 ದಿನಗಳ ಅನಿರ್ದಿಷ್ಟ ಹೋರಾಟದ ನಂತರ ರೈತ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ ಉಳಿದ ಹಕ್ಕೊತ್ತಾಯಗಳನ್ನು ಈಡೇರಿಸಲು ಲಿಖಿತ ಭರವಸೆಯನ್ನು ನೀಡಿತ್ತು. ಆದರೆ ಈ ಭರವಸೆಗೆ ವಿರುದ್ದವಾಗಿ ನಡೆದುಕೊಂಡ ಕಾರಣಕ್ಕಾಗಿ ಎರಡನೇ ಎನ್.ಡಿ.ಎ. ಸರ್ಕಾರ ಬಹುಮತ ಕಳೆದುಕೊಂಡಿದ್ದರೂ ಮತ್ತೇ ಆದೇ ರೈತ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಮೈಕ್ರೋ ಫೈನಾನ್ಸ್ ಗಳ ಕಿರುಕುಳ ತಡೆಗೆ ಆಗ್ರಹ

ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ಬಡ್ಡಿಯಾಸೆಗೆ ಮೈಕ್ರೋ ಫೈನಾನ್ಸ್ ಗಳು ಬಡವರಿಗೆ ಹಣ ನೀಡಿ ಸುಲಿಗೆ ಮಾಡುತ್ತಿದ್ದು, ಇದರಿಂದ ರೈತರು ಮಹಿಳೆಯರು ತಮ್ಮ ಊರುಗಳನ್ನೇ ತೊರೆದು ವಲಸೆ ಹೋಗುತ್ತಿದ್ದಾರೆ. ಹಾಗಾಗಿ ಇಂತಹ ದಂಧೆಯನ್ನು ತಡೆಗಟ್ಟಿ, ಕಿರುಕುಳವನ್ನು ತಪ್ಪಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ನಾಯಕ ಪಚ್ಚೆ ನಂಜುಂಡಸ್ವಾಮಿ, ರೈತಸಂಘದ ಮುರುವನಹಳ್ಳಿ ಶಂಕರ್, ಕರ್ನಾಟಕ ಪ್ರಾಂತ ರೈತಸಂಘದ ಎಲ್.ಎನ್.ಭರತ್ ರಾಜ್, ಸಿಪಿಐಎಂ ಟಿ.ಎಲ್.ಕೃಷ್ಣೇಗೌಡ, ಸಿಐಟಿಯು ಸಿ.ಕುಮಾರಿ, ಜನವಾದಿ ಸಂಘಟನೆಯ ದೇವಿ, ಶಿವಳ್ಳಿ ಚಂದ್ರು ಸೇರಿದಂತೆ ಕೋಣನಹಳ್ಳಿ ಮಂಜು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ