ಮಂಡ್ಯ ಜಿಲ್ಲೆಯ 1463 ಕನ್ನಡ ಶಾಲೆಗಳನ್ನ ಉಳಿಸಿ ಹಾಗೂ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯನಗರದ ಸಂಜಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಗುರುವಾರ ಬಂಧಿಸಿದರು.
ಕನ್ನಡ ಸೇನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟ ವಾಟಾಳ್ ನಾಗರಾಜ್, ವಾಟಾಳ್ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ ಆರ್ ಕುಮಾರ್ ಪ್ರತಿಭಟನೆ ನಡೆಸಿ ರಸ್ತೆತಡೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಸ್ಥಿತಿಗತಿ ಶೋಚನೀಯವಾಗಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಆಡಳಿತ ನಡೆಸುವ ಸರ್ಕಾರಕ್ಕೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಯಾಕೆ ಮೀನಮೇಷ ಏಣಿಸುತ್ತಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಶಾಲೆಗಳಿಗೆ ಅನುದಾನ ನೀಡಲು ಸರ್ಕಾರದ ಬಳಿ ಹಣವಿಲ್ಲವೇ? 30 ವರ್ಷಗಳಿಂದ ಕನ್ನಡ ಶಾಲೆಗಳನ್ನು ಕತ್ತಲೆಯಲ್ಲಿ ಇಟ್ಟಿದ್ದೀರಿ. ಶಾಲಾ ಕಟ್ಟಡಗಳು ಕುಸಿದು ಬೀಳುತ್ತಿವೆ. ಶಿಕ್ಷಕರ ಕೊರತೆಯಿದೆ. ಈ ಕೂಡಲೇ ವಿಶೇಷ ಪ್ಯಾಕೇಜ್ ಮೂಲಕ ಕನ್ನಡ ಮಾಧ್ಯಮ ಶಾಲೆಗಳನ್ನು ಸಬಲೀಕರಣಗೊಳಿಸಬೇಕೆಂದು ಆಗ್ರಹಿಸಿದರು.
ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಹಲವು ಹೋರಾಟಗಾರರು ಬಂಧನಕ್ಕೆ ಒಳಗಾದರು.




