Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ

ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಅತ್ಯಾಚಾರ, ಕೊಲೆ ಪ್ರಕರಣಗಳನ್ನು ಗಮನಿಸಿದರೆ ರಾಜ್ಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಪರಿಸ್ಥಿತಿ ಉತ್ತಮವಾಗಿಲ್ಲ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸರು ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಬೆಂಗಳೂರು ಘಟಕದ ಮಹಿಳಾ ಉಸ್ತುವಾರಿ ಜನನಿವತ್ಸಲ ಆರೋಪಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತಿಚೇಗೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್‌ಗೆ ಹೋದ ಬಾಲಕಿಯ ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿರುವ ಘಟನೆ ಇಡೀ ನಾಗರಿಕ ಸಮಾಜವು ತಲೆತಗ್ಗಿಸುವಂತೆ ಮಾಡಿದೆ. ಏನು ಅರಿಯದ ಪುಟ್ಟ ಬಾಲಕಿಯನ್ನು ಪುಸಲಾಯಿಸಿ, ಅತ್ಯಾಚಾರ ಮಾಡಿ, ಕೊಲೆ ಮಾಡಿರುವುದು ನಮ್ಮ ವ್ಯವಸ್ಥೆ ಮತ್ತು ನಾಗರೀಕ ಸಮಾಜ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ತೋರಿಸುತ್ತದೆ ಎಂದರು.

ಮಳವಳ್ಳಿ ಪ್ರಕರಣ ಕೇವಲ ಒಂದು ಕೃತ್ಯವಾಗಿರದೆ, ರಾಜ್ಯದಲ್ಲಿ ಮಹಿಳೆಯರ ಮತ್ತು ಚಿಕ್ಕ ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ಮತ್ತು ದೌರ್ಜನ್ಯ ನಡೆಯುತ್ತಿದೆ. ಇದಕ್ಕೆ ರಾಜ್ಯದಲ್ಲಿ ಹಿಂದೆ ನಡೆದಿರುವ ದಾನಮ್ಮ, ಸೌಜನ್ಯ, ರಕ್ಷಿತಾ ಅತ್ಯಾಚಾರ ಪ್ರಕರಣಗಳು ಸಾಕ್ಷಿಯಾಗಿವೆ. ವಿಳಂಬ ತನಿಖೆ ಮತ್ತು ತಡವಾಗಿ ನ್ಯಾಯದಾನ ನೀಡುವುದು. ಇಂತಹ ಪ್ರಕರಣಗಳು ನಿರಂತರವಾಗಿ ನಡೆಯಲು ಕಾರಣವಾಗಿದೆ ಎಂದು ದೂರಿದರು.

ಮಹಿಳೆಯರು ತಮ್ಮ ಮೇಲಾದ ಅತ್ಯಾಚಾರ ಮತ್ತು ದೌರ್ಜನ್ಯವಾದ ಸಂದರ್ಭದಲ್ಲಿ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲು ಹೋದರೆ ಅವರಿಗೆ ಅವಮಾನ ಮಾಡುವ ರೀತಿಯಲ್ಲಿ ನಮ್ಮ ಪೊಲೀಸ್ ವ್ಯವಸ್ಥೆ ಕಲಸ ಮಾಡುತ್ತಿದೆ. ಬಹುತೇಕ ಸಂದರ್ಭಗಳಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸದ, ರಾಜಿ ಪಂಚಾಯಿತಿ ಮಾಡುವುದು, FIR ಮಾಡದೆ, ಕೇವಲ ದೂರು ದಾಖಲಿಸಿ ಸುಮ್ಮನಾಗುವುದು, ಇಲ್ಲಾ ಪ್ರಭಾವಿಗಳ ಒತ್ತಡಕ್ಕೆ ಮಣಿದು ಪ್ರಕರಣವನ್ನ ಮುಚ್ಚಿ ಹಾಕುವ ಕೆಲಸ ಮಾಡಲಾಗುತ್ತದೆ ಎಂದು ಆರೋಪಿಸಿದರು.

2022 ರ  ಈ ಏಳು ತಿಂಗಳಲ್ಲಿ ರಾಜ್ಯಾದ್ಯಂತ 305 ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಅಂದರೆ ತಿಂಗಳಿಗೆ ಸುಮಾರು 44 ಸರಾಸರಿ ಪ್ರಕರಣಗಳು, ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಅಂಕಿ ಅಂಶಗಳ ಪ್ರಕಾರ , 2018 ರಲ್ಲಿ 485, 2019 ರಲ್ಲಿ 497 ಮತ್ತು 2020ರಲ್ಲಿ 472 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ’ ಕೆಲಸ ಮಾಡುತ್ತಿದೆ’ ಎಂದು ತೋರಿಸುತ್ತದೆ ಎಂದು ದೂರಿದರು.

ಮುರುಘಾಶ್ರೀ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ 

ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿ ಪೋಕ್ಸೋ ಕಾಯ್ದೆಯಡಿ ಬಂಧನವಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧವು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಜನನಿವತ್ಸಲ ಅವರು, ಪ್ರತಿಷ್ಠಿತ ಮಠದ ಸ್ವಾಮೀಜಿಯಾಗಿರುವ ಅವರ ವಿರುದ್ಧವು ಕಠಿಣ ಕ್ರಮ ಕೈಗೊಳ್ಳಬೇಕೆಂದದರು.

ಮುಂದಿನ ದಿನಗಳಲ್ಲಿ ಮುರುಘಶ್ರೀಗಳ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ  ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು, ತಪ್ಪಿ ಮಾಡಿದವರೂ ಯಾರೇ ಆಗಲಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಪಕ್ಷದ ಬೆಂಗಳೂರು ಘಟಕದ ಪ್ರಧಾನ ಕಾರ್ಯದರ್ಶಿ ಮಹಾಲಕ್ಷ್ಮಿ, ಕಾರ್ಯದರ್ಶಿ ಪ್ರೇಮ, ಮಂಡ್ಯ ಜಿಲ್ಲಾಧ್ಯಕ್ಷ ರಮೇಶ್ ಗೌಡ, ಪುಷ್ಪ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!