Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ಕೆ.ಬಿ.ಚಂದ್ರಶೇಖರ್ ಬಗ್ಗೆ ಮಾತನಾಡುವ ನೈತಿಕತೆ ಶಾಸಕರಿಗಿಲ್ಲ- ವಿಠಲಾಪುರ ಸುಬ್ಬೇಗೌಡ

ಏಳು ಬಾರಿ ಕಾಂಗ್ರೆಸ್ ಪಕ್ಷದ ಬಿ’ ಫಾರಂ ಪಡೆದು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಬಾರಿ ಶಾಸಕರಾಗಿ ಜನ ಪರವಾಗಿ ಕೆಲಸ ಮಾಡಿದ ಮಾಜಿ ಶಾಸಕ  ಕೆ.ಬಿ. ಚಂದ್ರಶೇಖರ್ ಅವರ ಬಗ್ಗೆ ಮಾತನಾಡಲು ಶಾಸಕ ಹೆಚ್.ಟಿ.ಮಂಜು ಅವರಿಗೆ ನೈತಿಕತೆ ಇಲ್ಲ, ಅವರು ಇತ್ತೀಚಿಗೆ ಶಾಸಕರಾಗಿದ್ದಾರೆ, ಮೊದಲು ಒಳ್ಳೆಯ ಕೆಲಸವನ್ನು ಮಾಡಿ, ನಂತರ ಟೀಕೆ ಟಿಪ್ಪಣಿ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ವಿಠಲಾಪುರ ಸುಬ್ಬೇಗೌಡ ತಿರುಗೇಟು ನೀಡಿದರು.

ಕೃಷ್ಣರಾಜಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸುವ ಕೆಲಸವನ್ನು ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಸರ್ವೋಚ್ಚ ನಾಯಕ ಸಚಿವ ಎನ್ ಚಲುವರಾಯಸ್ವಾಮಿ ಅವರ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿಯೇ ಏಕವಚನದಲ್ಲಿ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಕೇವಲ ಎರಡು ತಿಂಗಳುಗಳಾಗಿವೆ. ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಶಾಸಕ ಮಂಜು ಅವರು ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ ಎಂದು ಸುಬ್ಬೇಗೌಡ ಆಕ್ರೋಶ ವ್ಯಕ್ತಪಡಿಸಿದರು..

ಕೆ.ಆರ್.ಪೇಟೆ ತಾಲೂಕಿಗೆ ಶಾಸಕ ಹೆಚ್.ಟಿ.ಮಂಜು ಅವರ ಕೊಡುಗೆ ಶೂನ್ಯವಾಗಿದೆ. ಮಾಜಿ ಸಚಿವ ನಾರಾಯಣಗೌಡ ಅವರು ಕೆ.ಆರ್.ಪೇಟೆ ಪಟ್ಟಣದ ಎಂ.ಕೆ. ಬೊಮ್ಮೇಗೌಡ ವೃತ್ತದಲ್ಲಿ ನಿರ್ಮಿಸಿದ್ದ ಪ್ರಯಾಣಿಕರ ತಂಗುದಾಣಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಂಗುದಾಣ ಎಂದು ಹೆಸರು ಹಾಕಿಸಿ ತಮ್ಮ ಭಾವಚಿತ್ರ ಹಾಕಿಸಿಕೊಂಡಿದ್ದಷ್ಟೇ ಸಾಧನೆ. ಶಾಸಕರಾಗಿ ಅವರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿ ತಾಲೂಕಿನಲ್ಲಿ ತಮ್ಮ ಹೆಸರನ್ನು ಚಿರಸ್ತಾಯಿಗೊಳಿಸಲಿ ಎಂದು ಹೇಳಿದರು.

ಜಾಹೀರಾತು

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್ ಮಾತನಾಡಿ, ಕೆ ಬಿ ಚಂದ್ರಶೇಖರ್ ಅವರು ಕುಮಾರಸ್ವಾಮಿ ವರ್ತಿಸುತ್ತಿರುವ ನಡೆಯ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಬಗ್ಗೆ ಇಲ್ಲಸಲ್ಲದ ಸುಳ್ಳು ಹೇಳಿಕೆಗಳನ್ನು ನೀಡುತ್ತಾ ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿರುವುದರ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲ ಪಡೆದು ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಕುಮಾರಸ್ವಾಮಿ, ಈಗ ಕಾಂಗ್ರೆಸ್ ಪಕ್ಷದ ವಿರುದ್ಧವೇ ಮಸಲತ್ತು ನಡೆಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಮುಖಂಡರಾದ ಡಾಕ್ಟರ್ ರಾಮಕೃಷ್ಣೇಗೌಡ, ವಕೀಲ ಚಟ್ಟಂಗೆರೆ ಬಿ.ನಾಗೇಶ್, ಪರಿಶಿಷ್ಟ ಜಾತಿ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಜಯ್ಯ, ನಿವೃತ್ತ ಶಿಕ್ಷಕ ಶಿವಣ್ಣ, ಗ್ರಾ.ಪಂ.ಮಾಜಿ ಸದಸ್ಯ ಅಗ್ರಹಾರ ಬಾಚಹಳ್ಳಿ ಕುಮಾರ್ ಸಭೆಯಲ್ಲಿ ಮಾತನಾಡಿದರು.

ಕೆ.ಆರ್.ಪೇಟೆ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕುಮಾರ್, ಮುಖಂಡರಾದ ಶಕುಂತಲಾ, ಕೆ.ಬಿ.ಮಹೇಶ್, ಬಳ್ಳೇಕೆರೆ ವಿಜಯ್ ಕುಮಾರ್, ಚೇತನಾ ಮಹೇಶ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಅಕ್ಕಿಹೆಬ್ಬಾಳು ದಿವಾಕರ್ ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!