Wednesday, November 18, 2026

ಪ್ರಾಯೋಗಿಕ ಆವೃತ್ತಿ

ಚುನಾವಣೆ ಬಂದಾಗ ಬರುವ ಪ್ರಧಾನಿ, ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಯುತ್ತಿಲ್ಲ- ವಾಟಾಳ್ ನಾಗರಾಜ್

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೇಲಿಂದ ಮೇಲೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರು  ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ, ನಮ್ಮ ಹಿತ ಕಾಯಲು ವಿಫಲರಾಗಿದ್ದಾರೆಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಜಿಲ್ಲಾ ರೈತ ಹಿತರಕ್ಷಣ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ದೇಶದ ಪ್ರಧಾನಿ ನರೇಂದ್ರ ಮೋದಿಗೆ ಬರೀ ಚುನಾವಣೆ ಚಿಂತೆ, ಇಲ್ಲಿ ಯಾವುದೇ ಚುನಾವಣೆ ಇಲ್ಲ ,ಹಾಗಾಗಿ ಕರ್ನಾಟಕದ ಹಿತ ಕಾಯಲು ಮುಂದಾಗಿಲ್ಲ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳದ್ದು ಬರೀ ಬೊಗಳೆ ಮಾತು ಎಂದು ಕಿಡಿಕಾರಿದರು.

ಕರ್ನಾಟಕ ಮತ್ತು ತಮಿಳುನಾಡಿನ ಪರಿಸ್ಥಿತಿ ಅವಲೋಕಿಸಿ, ಜಲಾಶಯಗಳಲ್ಲಿನ ನೀರಿನ ಲಭ್ಯತೆ ಅಂಕಿ ಅಂಶದ ಮಾಹಿತಿ ಪಡೆದು ಎರಡು ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ, ಸೌಹಾರ್ದಯುತ ಪರಿಹಾರ ರೂಪಿಸಲು ಪ್ರಧಾನ ಮಂತ್ರಿ ಮುಂದಾಗಬಹುದಾಗಿತ್ತು, ಆದರೆ ಆ ನಿಟ್ಟಿನಲ್ಲಿ ಪ್ರಧಾನಿಯವರು ಗಮನಹರಿಸುತ್ತಿಲ್ಲ ಎಂದು ದೂರಿದರು.

ಮುಖ್ಯಮಂತ್ರಿ ದಿಟ್ಟ ನಿಲುವು ತೆಗೆದುಕೊಳ್ಳಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳ್ಳೆಯ ಸಂದರ್ಭ ಬಂದಿದೆ, ಕಾವೇರಿ ನೀರು ಬಿಡುವುದಿಲ್ಲ ಎಂದು ದಿಟ್ಟ ನಿಲುವು ತೆಗೆದುಕೊಳ್ಳಲಿ, ಇತಿಹಾಸದಲ್ಲಿ ಅವರ ಹೆಸರು ಚಾರಿತ್ರಿಕವಾಗಿರಲಿದೆ, ಹೊಸ ಇತಿಹಾಸ ಸೃಷ್ಟಿಯಾಗಲಿದೆ ಎಂದು ಸಲಹೆ ನೀಡಿದರು.

ಕಾವೇರಿ ನದಿ ನೀರು ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿ ದೆಹಲಿಯಲ್ಲಿ ಕುಳಿತು ನೀರು ಬಿಡಿ ಎಂದು ಆದೇಶ ಮಾಡುವುದಲ್ಲ, ಕರ್ನಾಟಕಕ್ಕೆ ಬಂದು ಕಾವೇರಿ ಕೊಳ್ಳದ ಜಲಾಶಯಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲಿ, ನೀರಿನ ಅಗತ್ಯತೆಯ ಬಗ್ಗೆ ಖುದ್ದು ನೋಡಲಿ, ಅನಂತರ ನಿಲುವು ಪ್ರಕಟಿಸಲಿ, ಸುಮ್ಮನೆ ನೀರು ಬಿಡಿ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವ ಮೂಲಕ ಸರ್ಕಾರ ಹೇಡಿತನ ಪ್ರದರ್ಶಿಸುತ್ತಿದೆ, ಆದೇಶ ಮಾಡಿರುವ ಪ್ರಮಾಣಕ್ಕಿಂತ ಕಡಿಮೆ ನೀರು ಹರಿಸುತ್ತಿದ್ದೇವೆ ಎಂದು ಹೇಳುವ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ, ವಿಧಾನ ಮಂಡಲದ ಅಧಿವೇಶನ ಕರೆದು ಚರ್ಚೆ ಮಾಡಬಹುದಿತ್ತು, ಅದನ್ನು ಸಹ ಮಾಡದ ಸರ್ಕಾರ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್, ಕರವೇ ರಾಜ್ಯಾಧ್ಯಕ್ಷ  ಪ್ರವೀಣ್‌ಕುಮಾರ್‌ಶೆಟ್ಟಿ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ