ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಸಂಘ ಸಂಸ್ಥೆಗಳು ಹಾಗೂ ಸಮುದಾಯದವರು ಒಟ್ಟಾಗಿ YES TO ACCESS ಆಪ್ ನ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ತಿಳಿಸಿದರು.
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ವಿಕಲಚೇತನರಿಗಾಗಿ ದುಡಿಯುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸುಗಮ್ಯ ಯಾತ್ರಾ ಅಭಿಯಾನದಡಿ Yes to Access APP ಮೂಲಕ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ತಡೆರಹಿತ ವಾತಾವರಣ ನಿರ್ಮಿಸಲು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಇಂದು ಆಯೋಜಿಸಲಾಗಿದ್ದ “ಸುಗಮ್ಯ ಯಾತ್ರ – ಪ್ರತಿ ಹೆಜ್ಜೆ ಸಮಾನತೆಯ ಕಡೆಗೆ” ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಸಂಘ ಸಂಸ್ಥೆಗಳು ಹಾಗೂ ಸಮುದಾಯದವರು ವಿಕಲಚೇತನಿರಿಗೆ ನೀಡುವ ಸೌಲಭ್ಯಗಳು ದೊರೆಯುತ್ತಿದ್ದೇಯೇ, ಇಲ್ಲವೇ ಎಂಬ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೆಲಸ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.
ವಿಕಲ ಚೇತನರ ವಿದ್ಯಾಭ್ಯಾಸಕ್ಕೆ ಹಾಗೂ ಅವರ ಜ್ಞಾನ ಬಂಡಾರಕ್ಕೆ ಅನುಕೂಲವಾಗಲು ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲೂ ವಿಕಲ ಚೇತನರರಿಗಾಗಿಯೇ 5 ಗ್ರಂಥಾಲಯಗಳನ್ನು ತೆರೆಯಲು ನಿರ್ಧರಿಸಿದ್ದು ಅದರ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.
YES TO ACCESS ಆಪ್ ನ ಮೂಲಕ ಸರ್ವಜನಿಕರು ಸಮಸ್ಯೆಯ ಬಗ್ಗೆ ಮಾಹಿತಿಯನ್ನು ಹೇಗೆ ತಿಳಿಸಬೇಕು ಹಾಗೂ ಅದರ ಬಳಕೆ ಹೇಗೆ ಎನ್ನುವುದರ ಬಗ್ಗೆ ಅರಿವು ಮೂಡಿಸಲು ತರಬೇತಿಗಳನ್ನು ಆಯೋಜಿಸಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್. ಎಸ್ ಕೋಮಲ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶರಾದ ಎಸ್. ರಾಜೀವ್ ಮೂರ್ತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾದ್ಯಕ್ಷರಾದ ಡಾ. ಮೀರಾ ಶಿವಲಿಂಗಯ್ಯ ಹಾಗೂ ಪ್ರೇರಣ ಅಂಧರ ಶಾಲೆ ಮುಖ್ಯಸ್ಥ ರವಿಕುಮಾರ್ ಉಪಸ್ಥಿತರಿದ್ದರು.




