ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ರೋಗ ಮುಕ್ತ ಕರ್ನಾಟಕ ಪ್ರಯುಕ್ತ ಹಮ್ಮಿಕೊಂಡಿರುವ ಯೋಗಥಾನ್ ಯಶಸ್ವಿಗೊಳಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಸೂಚಿಸಿದರು.
ಬೆಂಗಳೂರಿನ ವಿಕಾಸಸೌಧದಿಂದ ಇಂದು ಜಿಲ್ಲಾಧಿಕಾರಿಗಳು, ಸಿಇಒಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ಸೆಪ್ಟೆಂಬರ್ 17 ರಂದು ನಡೆಯಲಿರುವ ಯೋಗಾಥಾನ್ ಕಾರ್ಯಕ್ರಮದ ಪೂರ್ವ ಸಿದ್ದತೆ ಬಗ್ಗೆ ಮಾಹಿತಿ ಪಡೆದುಕೊಂಡರು.
ರೋಗ ಮುಕ್ತ ಕರ್ನಾಟಕ ನಿರ್ಮಾಣ ಹಾಗೂ ಪ್ರಧಾನ ಮಂತ್ರಿ ಶ್ರೀನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಯೋಗಾಥಾನ್-2022 ನ್ನು ಅವರಿಗೆ ಅರ್ಪಿಸಲು ಹಾಗೂ ಗಿನ್ನೆಸ್ ರೆಕಾರ್ಡ್ ಮಾಡಲು ನಿರ್ಧರಿಸಲಾಗಿದೆ. ಏಕಕಾಲದಲ್ಲಿ ಐದು ಲಕ್ಷ ಜನರು ಯೋಗಾಸನ ಮಾಡಲಿದ್ದು ಅದಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳ ರಚಿಸಿ
ಮುಖ್ಯಮಂತ್ರಿಗಳ ಕನಸಿನ ಯೋಜನೆಯಾದ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳನ್ನು ತ್ವರಿತವಾಗಿ ರಚನೆ ಮಾಡುವಂತೆ ಸಿಇಒಗಳಿಗೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.
ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆ ಮಾಡಬೇಕು. ಒಂದು ತಿಂಗಳಿನಲ್ಲಿ ಎಲ್ಲಾ ಪಂಚಾಯತ್ಗಳಲ್ಲಿ ಸಂಘ ರಚಿಸಿ, ನೋಂದಣಿ ಮಾಡಿಸಬೇಕು. ಸಂಘ ನೋಂದಣಿಯಾದ ತಕ್ಷಣವೆ 10 ಸಾವಿರ ಬಿಡುಗಡೆ ಮಾಡಲಾಗುವುದು ಎಂದರು.
ಇದೇ ವೇಳೆ ಕ್ರೀಡಾ ಅಂಕಣ ನಿರ್ಮಾಣ ಅನುಷ್ಠಾನದಡಿ ನರೇಗಾ ಮೂಲಕ 504 ಕೋಟಿ ವೆಚ್ಚದಲ್ಲಿ ಪ್ರತಿಗ್ರಾಮ ಪಂಚಾಯತ್ನಲ್ಲಿ ಕ್ರೀಡಾ ಅಂಕಣ ನಿರ್ಮಿಸಲು ಸೂಚಿಸಲಾಗಿದೆ. ಕ್ರೀಡಾ ಅಂಕಣ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಘೋಷಿಸಿದ್ದು, ಇದು ಸರ್ಕಾರದ ಮಹತ್ವದ ಯೋಜನೆಯಾಗಿದೆ. ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಸೂಕ್ತ ತರಬೇತಿ ಸಿಗಬೇಕು ಎಂಬ ನಿಟ್ಟಿನಲ್ಲಿ ಈ ಕ್ರೀಡಾ ಅಂಕಣ ಯೋಜನೆಯನ್ನು ಘೋಷಿಸಲಾಗಿದೆ. ಎಲ್ಲಾ ಕಡೆ ಶೀಘ್ರದಲ್ಲೇ ಕ್ರೀಡಾ ಅಂಕಣಗಳನ್ನು ನಿರ್ಮಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಜಿಲ್ಲೆಯಲ್ಲಿನ ಕ್ರೀಡಾಂಗಣ ಅನುಷ್ಠಾನ ಯೋಜನೆ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್. ನಾಗರಾಜು, ಜಿ.ಪಂ.ಉಪ ಕಾರ್ಯದರ್ಶಿ ಸಂಜೀವಪ್ಪ,ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಆಸಿಫಾ, ನಿರ್ಮಿತಿ ಕೇಂದ್ರದ ಅಧಿಕಾರಿ ನರೇಶ್,ಯುವಸಬಲಿಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಓಂ ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.




